ಹುಳಿಯಾರು:ಪಟ್ಟಣದಲ್ಲಿ ಗೌರಿ ಗಣೇಶ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕೆಂದು ಪಿಎಸೈ ಪ್ರವೀಣ್ ಕುಮಾರ್ ತಿಳಿಸಿದರು.
ಹುಳಿಯಾರು ಪೋಲಿಸ್ ಠಾಣೆಯಲ್ಲಿ ಗೌರಿ ಗಣೇಶ ,ಬಕ್ರೀದ್ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮಂಡಲಿಯವರು ಗಮನ ಹರಿಸಬೇಕೆಂದರು.
ಹುಳಿಯಾರು ಪೋಲಿಸ್ ಠಾಣೆಯಲ್ಲಿ ಗೌರಿ ಗಣೇಶ ,ಬಕ್ರೀದ್ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ನಡೆದ ಶಾಂತಿ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು. |
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹಗಳನ್ನು ಕೂರಿಸುವುದಕ್ಕೂ ಮುಂಚೆ ಆಯೋಜಕರು ಕಡ್ಡಾಯವಾಗಿ ಅನುಮತಿ ಪಡೆಯಬೇಕು.ಗಣಪತಿ ಪೆಂಡಾಲ್‌ಗಳಲ್ಲಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಮಾತ್ರ ಧ್ವನಿವರ್ಧಕಗಳನ್ನು ಬಳಸಬೇಕು.ಸಾರ್ವಜನಿಕರ ಓಡಾಟಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪೆಂಡಾಲ್ ನಿರ್ಮಿಸಬೇಕು, ಬಲವಂತವಾಗಿ ಚಂದಾ ವಸೂಲಿ ಮಾಡಬಾರದು, ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.
ನಾಗರಿಕರು ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.ಸಣ್ಣಪುಟ್ಟ ಅಹಿತಕರ ಘಟನೆ ನಡೆದಲ್ಲಿ ಸಮಾಜದ ಹಿರಿಯರು ಮುಂದಾಳತ್ವವಹಿಸಿ ಸಮಸ್ಯೆ ಬಗೆಹರಿಸಬೇಕೆ ಹೊರತು ಅದನ್ನು ಪ್ರಚೋದಿಸಿ ಸಮಸ್ಯೆ ಬಿಗಡಾಯಿಸಲು ಮುಂದಾಗಬಾರದು ಎಂದು ಮನವಿ ಮಾಡಿದರು.ಯಾರೊಬ್ಬರು ಮತ್ತೊಬ್ಬರ ಧಾರ್ಮಿಕ ಭಾವನೆಗಳಿಗೆ ನೋವುಂಟಾಗುವಂತೆ ವರ್ತಿಸಬಾರದು. ಸಮಾಜ ಘಾತುಕ ಶಕ್ತಿಗಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕೆಂದು ಕೋರಿದರು.
ಬಂಟಿಂಗ್ಸ್, ಬ್ಯಾನರ್ ಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಬ್ಯಾನರ್ ಬಂಟಿಂಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೆ ಪಟ್ಟಣದಲ್ಲಿ ಗಲಭೆ ಉಂಟಾಗಿದ್ದು ಇಂತಹ ಪ್ರಕರಣಗಳು ಮರುಕಳುಹಿಸಬಾರದು ಎಂದರು.
ಸಮಾಜದ ಮುಖಂಡರುಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಪಂಚಾಯ್ತಿ ಸದಸ್ಯ ವೈ.ಸಿ.ಸಿದ್ಧರಾಮಯ್ಯ,ತಾಲ್ಲೂಕ್ ಪಂಚಾಯ್ತಿ ಸದಸ್ಯ ಹೆಚ್.ಎನ್.ಕುಮಾರ್,ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್,ಉಪಾಧ್ಯಕ್ಷ ಗಣೇಶ್,ರೈತಸಂಘದ ಕೆಂಕೆರೆ ಸತೀಶ್,ನೂರಾನಿ ಮಸೀದಿಯ ಮುತುವಲ್ಲಿ ಭೈಜುಸಾಬ್,ಬಿಲಾಲ್ ಮಸೀದಿಯ ಮುತುವಲ್ಲಿ ಇಸ್ಮಾಯಿಲ್ ಸಾಬ್,ಗ್ರಾಪಂ ಸದಸ್ಯರಾದ ಎಲ್.ಆರ್.ಚಂದ್ರಶೇಖರ್,ಡಿಶ್ ಬಾಬು,ಹಿಂದೂ ಜಾಗರಣ ವೇದಿಕೆಯ ಬಡಗಿರಾಮಣ್ಣ,ಆಂಜನೇಯ ದೇವಾಲಯ ಸಮಿತಿಯ ಧನಂಜಯ,ಎಣ್ಣೆಗೆರೆ ಮಂಜಣ್ಣ,ಶ್ರೀ ಗಜಾನನ ಸೇವಾ ಸಂಘದ ಗೌರವಾಧ್ಯಕ್ಷ ಉದಯಶಂಕರ್ ಒಡೆಯರ್,ಕಾರ್ಯದರ್ಶಿ ಸಣ್ಣರಂಗಯ್ಯ,ಪ್ರಸನ್ನ ಗಣಪತಿ ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಎಸ್.ಮೋಹನ್ ಕುಮಾರ್ ಸೇರಿದಂತೆ ಹುಳಿಯಾರಿನ ವಿವಿಧ ಸಂಘ– ಸಂಸ್ಥೆಗಳ ಪ್ರತಿನಿಧಿಗಳು, ಹಿಂದೂ ಹಾಗೂ ಮುಸ್ಲಿಂ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ