ಹುಳಿಯಾರು : ಕಳೆದ ಏಳು ವರ್ಷಗಳಿಂದ ಹುಳಿಯಾರು ಪಟ್ಟಣವನ್ನು ಕಾಡುತ್ತಿರುವ ಕಸದ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ, ಸ್ಥಳೀಯ ಮುಖಂಡರೂ ಹಾಗೂ ಕೆ.ಆರ್.ಎಸ್. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಭಟ್ಟರಹಳ್ಳಿ ಮಲ್ಲಿಕಾರ್ಜುನ್ ಅವರು ತಿಪಟೂರು ಉಪವಿಭಾಗಾಧಿಕಾರಿಗಳಿಗೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಈ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸದಿದ್ದರೆ, ಉಗ್ರ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಈ ಕುರಿತು ಉಪವಿಭಾಗಾಧಿಕಾರಿಗಳೊಂದಿಗೆ ನಡೆದ ದೂರವಾಣಿ ಸಂಭಾಷಣೆಯಲ್ಲಿ, ಕಸ ವಿಲೇವಾರಿ ಘಟಕಕ್ಕಾಗಿ ಸರ್ಕಾರಿ ಜಾಗವನ್ನು ಗುರುತಿಸಲು ಅಧಿಕಾರಿಗಳು ತೋರುತ್ತಿರುವ ಅಸಡ್ಡೆ ಮತ್ತು ಕಾರ್ಯವಿಧಾನದ ಬಗ್ಗೆ ಮಲ್ಲಿಕಾರ್ಜುನ್ ಆಕ್ರೋಶ ವ್ಯಕ್ತಪಡಿಸಿದ್ದು, ಕೇವಲ ಕಾಗದದಲ್ಲಿ ಜಾಗ ಗುರುತಿಸಿ ಪಟ್ಟಣ ಪಂಚಾಯಿತಿಗೆ ಹಸ್ತಾಂತರಿಸುವ ಬದಲು, ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿ, ತ್ಯಾಜ್ಯ ವಿಲೇವಾರಿ ಘಟಕದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜಾಗ ಇದೆ : ಮಲ್ಲಿಕಾರ್ಜುನ್ ಅವರು ತಾವು ಸ್ವತಃ ಗುರುತಿಸಿರುವ ವಿವಾದರಹಿತ ಸರ್ಕಾರಿ ಜಾಗವನ್ನು ಅಧಿಕಾರಿಗಳಿಗೆ ತೋರಿಸಲು ಸಿದ್ಧವಿರುವುದಾಗಿ ತಿಳಿಸಿದರು. ಈ ಜಾಗವು ಪಟ್ಟಣದಿಂದ 5 ಕಿಲೋಮೀಟರ್ ವ್ಯಾಪ್ತಿಯಲ್ಲೇ ಇದ್ದು, ಇದು ಕಸ ವಿಲೇವಾರಿ ಘಟಕಕ್ಕೆ ಅತ್ಯಂತ ಸೂಕ್ತವಾಗಿದೆ ಎಂದು ಅವರು ವಿವರಿಸಿದರು. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡುವಂತೆ ಅವರು ಒತ್ತಾಯಿಸಿದರು.
https://www.facebook.com/share/p/16ow4rUUs8/
ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಉಪವಿಭಾಗಾಧಿಕಾರಿಗಳು ತಹಸೀಲ್ದಾರ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಪ್ರವೃತ್ತರಾಗಬೇಕಾದ ಅಗತ್ಯವಿದೆ ಎಂದು ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ.
ಕೇವಲ ಕಚೇರಿಗಳಲ್ಲಿ ಕುಳಿತು ಆದೇಶಗಳನ್ನು ಹೊರಡಿಸುವ ಬದಲು, ಸ್ಥಳೀಯರ ಸಹಭಾಗಿತ್ವದಲ್ಲಿ ಸಮಸ್ಯೆಗೆ ವಾಸ್ತವಿಕ ಪರಿಹಾರ ಕಂಡುಕೊಳ್ಳುವುದು ಆಡಳಿತದ ಜವಾಬ್ದಾರಿಯಾಗಿದೆ ಎಂದು ಅವರು ಅಧಿಕಾರಿಗಳಿಗೆ ನೆನಪಿಸಿದರು.
ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಈ ಸಮಸ್ಯೆಗೆ ಒಂದು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ತಮ್ಮ ಪಕ್ಷವು ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗಲಿದೆ ಎಂದು ಮಲ್ಲಿಕಾರ್ಜುನ್ ಸ್ಪಷ್ಟಪಡಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ